ರಾಹುಲ್ ಗಾಂಧಿ ವಿರುದ್ಧ ಶಾಸಕ ಯಶ್‌ಪಾಲ್ ಸುವರ್ಣ ಪ್ರಚೋದನಕಾರಿ ಭಾಷಣ ಆರೋಪ: ಕೋಟ ಠಾಣೆಯಲ್ಲಿ ಕಾಂಗ್ರೆಸ್ ದೂರು

ಕೋಟ, ಜು. 29: ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರು ಪ್ರಚೋದನಕಾರಿ ಭಾಷಣ ಮಾಡಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕೋಟ ಬ್ಲಾಕ್ ಕಾಂಗ್ರೆಸ್ ಮುಖಂಡರು ಕೋಟ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

ದೂರಿನ ಪ್ರಕಾರ, ಜುಲೈ 28ರಂದು ಉಡುಪಿ ನಗರದ ಸರ್ವೀಸ್ ಬಸ್ ನಿಲ್ದಾಣದ ಸಮೀಪದ ಜಟ್ಕಾ ಸ್ಟ್ಯಾಂಡ್‌ನಲ್ಲಿ ಕಾಂಗ್ರೆಸ್ ಹಾಗೂ ನೀಟ್ ವಿದ್ಯಾರ್ಥಿಗಳ ಪ್ರತಿಭಟನೆಯ ವಿರುದ್ದ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಶಾಸಕ ಯಶ್‌ಪಾಲ್ ಸುವರ್ಣ ಅವರು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೆ, ಬಾಬ್ರಿ ಮಸೀದಿ ಧ್ವಂಸದ ಕುರಿತು ಉಲ್ಲೇಖಿಸಿ ರಾಹುಲ್ ಗಾಂಧಿ ಅವರ ವಂಶವನ್ನು ಅದೇ ರೀತಿಯಲ್ಲಿ “ಧ್ವಂಸ ಮಾಡುತ್ತೇವೆ” ಎಂಬ ರೀತಿಯ ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದೇ ವೇಳೆ ಬಿಜೆಪಿ ಕಾರ್ಯಕರ್ತರನ್ನು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಪ್ರಚೋದಿಸುವ ಮೂಲಕ ಗಲಭೆಗೆ ಕುಮ್ಮಕ್ಕು ನೀಡಲು ಯತ್ನಿಸಿದ್ದು, ಸಮಾಜದಲ್ಲಿ ಧರ್ಮಗಳ ನಡುವೆ ವೈಮನಸ್ಸು ಹಾಗೂ ಅಶಾಂತಿ ಉಂಟುಮಾಡುವ ರೀತಿಯಲ್ಲಿ ಭಾಷಣ ಮಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನೀಟ್ ವಿದ್ಯಾರ್ಥಿಗಳನ್ನೂ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಶಾಸಕ ಯಶ್‌ಪಾಲ್ ಸುವರ್ಣ ಹಾಗೂ ಸಂಬಂಧಪಟ್ಟ ಇತರರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಕಲಂ 192, 196(1), 352, 353(2), 196 ಮತ್ತು 57ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕೋಟ ಬ್ಲಾಕ್ ಕಾಂಗ್ರೆಸ್ ಆಗ್ರಹಿಸಿದೆ. ದೂರಿನೊಂದಿಗೆ ಶಾಸಕ ಯಶ್‌ಪಾಲ್ ಸುವರ್ಣ ಅವರು ನೀಡಿರುವುದಾಗಿ ಆರೋಪಿಸಲಾದ ಪ್ರಚೋದನಕಾರಿ ಭಾಷಣದ ವಿಡಿಯೊ ತುಣುಕುಗಳನ್ನು ಕೂಡ ಸಾಕ್ಷ್ಯವಾಗಿ ಪೊಲೀಸ್ ಠಾಣೆಗೆ ಸಲ್ಲಿಸಲಾಗಿದೆ.

ದೂರು ಸಲ್ಲಿಸುವ ಸಂದರ್ಭದಲ್ಲಿ ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ. ತಿಮ್ಮ ಪೂಜಾರಿ, ಪ್ರಚಾರ ಸಮಿತಿ ಅಧ್ಯಕ್ಷ ಗೋಪಾಲ್ ಬಂಗೇರ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಮೇಶ್ ಮೆಂಡನ್ ಹಾಗೂ ಕಾಂಗ್ರೆಸ್ ಮುಖಂಡ ಜಗನಾಥ್ ಪೂಜಾರಿ ಉಪಸ್ಥಿತರಿದ್ದರು.

Join WhatsApp

Join Now

Join Telegram

Join Now

Leave a Comment