
ಯಡಾಡಿ-ಮತ್ಯಾಡಿ: ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಾಲ್ಯದಿಂದಲೇ ನಿರಂತರ ಅಭ್ಯಾಸ, ಸೂಕ್ತ ತರಬೇತಿ ಹಾಗೂ ಮಾರ್ಗದರ್ಶನ ಅಗತ್ಯ. ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಜವಾಬ್ದಾರಿ ಶಿಕ್ಷಣ ಸಂಸ್ಥೆಗಳು, ಶಿಕ್ಷಕರು ಮತ್ತು ಪೋಷಕರ ಮೇಲಿದೆ ಎಂದು ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

ಯಡಾಡಿ-ಮತ್ಯಾಡಿಯ ವಿದ್ಯಾರಣ್ಯ ಕ್ಯಾಂಪಸ್ನಲ್ಲಿ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ, ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಹಾಗೂ ಸುಜ್ಞಾನ ಎಜುಕೇಶನ್ ಟ್ರಸ್ಟ್ನ ಸಂಯುಕ್ತ ಆಶ್ರಯದಲ್ಲಿ ನಡೆದ 2026-27ನೇ ಸಾಲಿನ ಕುಂದಾಪುರ ತಾಲೂಕು ಮಟ್ಟದ 14 ಮತ್ತು 17 ವರ್ಷದೊಳಗಿನ ಬಾಲಕ-ಬಾಲಕಿಯರ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಲಭ್ಯವಿರುವ ಗುಣಮಟ್ಟದ ಮೂಲಸೌಕರ್ಯಗಳು ಸರ್ಕಾರಿ ಶಾಲೆಗಳಲ್ಲಿಯೂ ದೊರೆಯಬೇಕು. ಶಿಕ್ಷಣ ಸಂಸ್ಥೆಗಳು ಪರಸ್ಪರರ ಸಾಧನೆಗಳನ್ನು ಮಾದರಿಯಾಗಿಟ್ಟುಕೊಂಡು ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.

ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಅಂತರರಾಷ್ಟ್ರೀಯ ಮಟ್ಟದ ಕ್ರೀಡಾ ಸಾಧನೆಗೆ ವೈಜ್ಞಾನಿಕ ತರಬೇತಿ ಮತ್ತು ಸೂಕ್ತ ಮಾರ್ಗದರ್ಶನ ಅಗತ್ಯ. ಕ್ರಿಕೆಟ್ನಂತೆ ಅಥ್ಲೆಟಿಕ್ಸ್ ಸೇರಿದಂತೆ ಇತರ ಕ್ರೀಡೆಗಳಿಗೂ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.

ಸುಜ್ಞಾನ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಕ್ರೀಡೆ ವಿದ್ಯಾರ್ಥಿಗಳಲ್ಲಿ ಶಿಸ್ತು, ಧೈರ್ಯ, ಆತ್ಮವಿಶ್ವಾಸ ಹಾಗೂ ತಂಡದ ಮನೋಭಾವ ಬೆಳೆಸುತ್ತದೆ. ಕ್ರೀಡಾಪಟುಗಳಿಗೆ ನಿರಂತರ ತರಬೇತಿ ಮತ್ತು ಪ್ರೋತ್ಸಾಹ ದೊರೆಯಬೇಕು ಎಂದರು.

ಗುತ್ತಿಗೆದಾರ ಅರುಣ್ ಕುಮಾರ್ ಶೆಟ್ಟಿ ಬಲೂನ್ ಹಾರಿಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.

ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ ಕ್ರೀಡಾಜ್ಯೋತಿ ಬೆಳಗಿಸಿದರು. ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಿತು. ವಾಲಿಬಾಲ್ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿ ಶ್ರೀಹರಿ ಅವರನ್ನು ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಗಣೇಶ್ ಶೆಟ್ಟಿ, ಸುಜ್ಞಾನ ಎಜುಕೇಶನ್ ಟ್ರಸ್ಟ್ ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಕುಮಾರ್ ಶೆಟ್ಟಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಚಂದ್ರ ನಾಯಕ್, ದೈಹಿಕ ಶಿಕ್ಷಣ ಪರಿವೀಕ್ಷಕ ಸತ್ಯನಾರಾಯಣ ಸೇರಿದಂತೆ ಶಿಕ್ಷಣ ಮತ್ತು ಕ್ರೀಡಾ ಕ್ಷೇತ್ರದ ಗಣ್ಯರು, ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ವಿದ್ಯಾರಣ್ಯ ಮತ್ತು ಸುಜ್ಞಾನ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ ಸ್ವಾಗತಿಸಿದರು. ಸತ್ಯನಾರಾಯಣ ಜಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಲಾಸ್ಯ ಮಧ್ಯಸ್ಥ ಪ್ರತಿಜ್ಞಾವಿಧಿ ಬೋಧಿಸಿದರು. ಚಂದ್ರಶೇಖರ ಬೀಜಾಡಿ, ರತ್ನಾಕರ ಹಾಗೂ ವಿಜಯಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ರಜತ್ ಭಟ್ ವಂದಿಸಿದರು.





